ಬೆಂಗಳೂರು: ರಾಜ್ಯದಾದ್ಯಂತ ಗುರುವಾಡ ನಡೆದ ಎಸ್ಎಸ್ಎಲ್’ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಶೇ.98.12ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು, ಪರೀಕ್ಷೆಯು ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಪರೀಕ್ಷೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯ 6ನೇ ದಿನವಾದ ಗುರುವಾರ ಪ್ರಥಮ ಭಾಷೆ ಕನ್ನಡ, ಹಿಂದಿ, ತೆಲುಗು, ಮರಾಠಿ, ತಮಿಳು, ಉರ್ದು, ಇಂಗ್ಲೀಷ್ ಮತ್ತು ಸಂಸ್ಕೃತ ಪರೀಕ್ಷೆಗಳಿಗೆ ಒಟ್ಟಾರೆ 7,78,618 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 7,64,006 ಮಂದಿ ಪರೀಕ್ಷೆ ಬರೆದಿದ್ದಾರೆ.
14,612 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕಳೆದ ವರ್ಷ ಶೇ.98.93ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಕಂಟೈನ್ಮೆಂಟ್ ವಲಯದಲ್ಲಿ 3,890 ವಿದ್ಯಾರ್ಥಿಗಳು ಹಾಗೂ ಕೋವಿಡೇತರ ಅನಾರೋಗ್ಯ ಕಾರಣದಿಂದ 670 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತುಮಕೂರು, ಮಧುಗಿರಿ, ಬೆಂಗಳೂರು ಗ್ರಾಮಂತರದ 13 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಹಾಗೂ ಭದ್ರತೆಯನ್ನು ಪರಿಶೀಲಿಸಲಾಯಿತು. ಎಲ್ಲಾ ಕೇಂದ್ರಗಳಲ್ಲಿಯೂ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು ಎಂದಿದ್ದಾರೆ.
Follow us on Social media