ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7, 8, 9ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಮಾರ್ಚ್ 31ರ ನಂತರ ಪ್ರಕಟಿಸಲಿದ್ದು, ಅಲ್ಲಿಯ ವರೆಗೆ ಪರೀಕ್ಷಾ ಪೂರ್ವಸಿದ್ಧತೆಗೆ ರಜೆ ಘೋಷಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಪಠ್ಯಕ್ರಮ, ಕೇಂದ್ರ ಪಠ್ಯಕ್ರಮ (ಸಿಬಿಎಸ್ ಇ), ಐಸಿಎಸ್ ಇ, ಐಜಿ, ಐಜಿಸಿಎಸ್ ಇ, ಐಬಿ ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ಪಠ್ಯಕ್ರಮಗಳ ಶಾಲೆಗಳಿಗೂ ಇದು ಅನ್ವಯಿಸಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯ, ಕೇಂದ್ರ ಪಠ್ಯಕ್ರಮ ಬೋಧಿಸುತ್ತಿರುವ ಎಲ್ಲಾ ಶಾಲೆಗಳಿಗೆ ಅನ್ವಯವಾಗುತ್ತದೆಯೇ ಎಂಬ ಪೋಷಕರು, ಶಾಲಾ ಪ್ರಾಂಶುಪಾಲರಿಂದ ಶಿಕ್ಷಣ ಇಲಾಖೆಗೆ ದೂರವಾಣಿ ಕರೆಗಳು ಬಂದ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆ ನಡೆಸಿ, ಒಂದು ವಾರಗಳ ಕಾಲ ರಾಜ್ಯದಲ್ಲಿ ವಿಶೇಷ ಎಚ್ಚರಿಕೆ ತೆಗೆದುಕೊಳ್ಳುವುದು ಹಾಗೂ ಎಲ್ಲೂ ಜನಸಂದಣಿ ಇರದಂತೆ ಜಾಗರೂಕತೆ ವಹಿಸಬೇಕು ಎಂದು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.