ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇತ್ತೀಚೆಗೆ ಸೌದಿ ಅರೇಬಿಯಾದಿಂದ ಗುಜರಾತ್ ಗೆ ಆಗಮಿಸಿದ್ದ ಮಹಿಳೆಯೊಬ್ಬರು ವೈರಸ್ ಸೋಂಕಿನಿಂದಾಗಿ ಸಾವನ್ನಪ್ಪುವ ಮೂಲಕ ಭಾರತದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಇತ್ತೀಚೆಗೆ ಸೌದಿ ಅರೇಬಿಯಾದಿಂದ ಆಗಮಿಸಿದ್ದ ಸುಮಾರು 85 ವರ್ಷ ವಯಸ್ಸಿನ ಮಹಿಳೆಯೊಬ್ಬರು ಅಹ್ಮದಾಬಾದ್ ನಲ್ಲಿ ಇಂದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸೌದಿಯಿಂದ ಭಾರತಕ್ಕೆ ವಾಪಸ್ ಆದ ಬಳಿಕ ಅವರನ್ನು ಕ್ವಾರಂಟೈನ್ ನಲ್ಲಿಡಲಾಗಿತ್ತು. ಈ ವೇಳೆ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಅವರನ್ನು ಅಹ್ಮದಾಬಾದ್ ನ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ವೈರಸ್ ಸೋಂಕು ಮಾತ್ರವಲ್ಲದೇ ಅವರು ಇನ್ನೂ ಸಾಕಷ್ಟು ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಈ ಸಾವಿನೊಂದಿಗೆ ಭಾರತದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 600ಗಡಿ ದಾಟಿದ್ದು, ಈ ವರೆಗೂ 622 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ 53 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನು ನಿನ್ನೆ ಆಂಧ್ರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 2 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಬುಧವಾರ ಕೇರಳ, ಮಹಾರಾಷ್ಟ್ರ, ಮಧ್ಯ ಪ್ರದೇಶ, ಮಿಜೋರಾಂ, ಗುಜರಾತ್ ನಲ್ಲೂ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow us on Social media