ಬೆಂಗಳೂರು; ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು ಮಧ್ಯಾಹ್ನ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ.
ಈ ನಡುವೆ ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಶುಕ್ರವಾರ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಹೊಸದಾಗಿ ಒಟ್ಟು 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರ, ತುಮಕೂರು ಜಿಲ್ಲೆಯಲ್ಲಿ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದರೆ, ಬೀದರ್, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆ, ಬೆಳಗಾವಿ ಹಾಗೂ ಬಾಗಲಕೋಟೆಯ ಜಮಖಂಡಿಯಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಇದರಂತೆ ಸೋಂಕಿತ 598 ಮಂದಿಯ ಪೈಕಿ 255 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
Follow us on Social media