ಕಲಬುರಗಿ: ಭೀತಿಯಿಂದಾಗಿ ವೈದ್ಯರು,ಶುಶ್ರೂಷಕಿಯರು ವಾಸವಾಗಿರುವ ಬಾಡಿಗೆ ಮನೆಗಳ ಮಾಲೀಕರು ಕಿರುಕುಳ ನೀಡಿ, ಮನೆ ಖಾಲಿಮಾಡುವಂತೆ ಒತ್ತಾಯಿಸುತ್ತಿರುವ ದೂರುಗಳ ಹಿನ್ನಲೆಯಲ್ಲಿ ಮನೆ ಮಾಲೀಕರು ಹಾಗೂ ಭೂಮಾಲಿಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿರುವ ಮನೆ ಮಾಲೀಕರ ವಿರುದ್ದ ಕಠಿಣ ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ನಗರ ಸಭೆಗಳ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವಿದ್ ಅಖ್ತರ್ ಆದೇಶ ಹೊರಡಿಸಿದ್ದಾರೆ.
ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ವಾಸವಾಗಿರುವ ಬಾಡಿಗೆ ಮನೆಗಳನ್ನು ಖಾಲಿ ಮಾಡುವಂತೆ ಮಾಲೀಕರು ತಾಕೀತು ಮಾಡುತ್ತಿದ್ದಾರೆ ಎಂದು ಹಲವು ಆರೋಗ್ಯ ಅಧಿಕಾರಿಗಳಿಂದ ಸಾಕಷ್ಟು ದೂರು ಬಂದಿರುವ ಹಿನ್ನಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, ಕೈಗೊಳ್ಳಲಾಗಿರುವ ಕ್ರಮದ ವರದಿಯನ್ನು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಛೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ಇತರ ಆರೋಗ್ಯ ಕಾರ್ಯಕರ್ತರಿಂದ ನಮಗೆ ಸಾಕಷ್ಟು ದೂರುಗಳು ಬಂದಿವೆ. ಭೂಮಾಲೀಕರು ಮತ್ತು ಮನೆ ಮಾಲೀಕರ ವರ್ತನೆ ಸರ್ಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುತ್ತಿದೆ ಎಂದು ವೈದ್ಯರು ಹಾಗೂ ಇತರ ಸಿಬ್ಬಂದಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಕೋವಿಡ್-19 ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ಹೈದರಾಬಾದ್ ಸಾಂಕ್ರಾಮಿಕ ರೋಗ ಕಾಯ್ದೆ 1950ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದೆ.
Source : UNI
Follow us on Social media