ಬೆಂಗಳೂರು: ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪಶುಪಾಲನಾ ಚಟುವಟಿಕೆಗೆ ಒಂದರಿಂದ ಮೂರು ಲಕ್ಷ ರೂಪಾಯಿಗಳವರೆಗೆ ಬಡ್ಡಿ ರಹಿತ ಮುಂಗಡ ಪಡೆಯಬಹುದಾಗಿದೆ. ಆದ್ದರಿಂದ ರೈತರು ಇದರ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗನಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಕೋವಿಡ್ ಹಿನ್ನೆಲೆಯ ಲಾಕ್ ಡೌನ್ ಸಂದರ್ಭದಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ಕೊಳೆಗೇರಿಗಳಲ್ಲಿ ಪ್ರತಿ ದಿನ 7.75 ಲಕ್ಷ ಲೀಟರ್ ಹಾಲನ್ನು ಉಚಿತವಾಗಿ ವಿತರಿಸಲಾಗಿದೆ. ಅಲ್ಲದೆ ಮಾಂಸ ಮಾರಾಟ, ಸಾಗಾಣಿಕೆ ಸರಪಣಿ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಕುರಿತು ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಲಾಕ್ ಡೌನ್ ಸಂದರ್ಭದಲ್ಲಿ ಮೈಸೂರು ಮತ್ತು ದಾವಣೆಗೆರೆ ಜಿಲ್ಲೆಗಳಲ್ಲಿ ಕಾಣಿಸಿಕೊಂಡ ಕೋಳಿ ಜ್ವರ ಹಾಗೂ ಬೀದರ್ ನಲ್ಲಿ ಕಾಣಿಸಿಕೊಂಡ ಹಂದಿ ಜ್ವರ ಸೋಂಕನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ.
Follow us on Social media