ಬೆಂಗಳೂರು : ಮಹಮ್ಮದ್ ಪೈಗಂಬರ್ ಕುರಿತಂತೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ಸೂಚಿಸಿದ್ದಾರೆ.
ನೂಪುರ್ ಶರ್ಮ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಇತರ ಜಿಲ್ಲೆಗಳಲ್ಲಿಯೂ ಆರಂಭವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಅವರು ನಿರ್ದೇಶಿಸಿದ್ದಾರೆ.ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೂ ವಿಶೇಷ ಸೂಚನೆ ನೀಡಿರುವ ಸಿಎಂ, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಭಂಗ ಉಂಟಾಗದಂತೆ ತಡೆಯಬೇಕು. ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿ ಖಡಕ್ ಸೂಚನೆ ನೀಡುವಂತೆಯೂ ತಿಳಿಸಿದ್ದಾರೆ.
Follow us on Social media