ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೋಮವಾರ ವಿಧಾನಸಭೆಗೆ ಮಾಹಿತಿ ನೀಡಿದರು.
ಸದನದ ಶೂನ್ಯ ವೇಳೆಯಲ್ಲಿ ಕೊರೋನಾ ವೈರಸ್ ಕುರಿತು ಸದನ ಸದಸ್ಯರು ವ್ಯಕ್ತಪಡಿಸಿದ ಕಾಳಜಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಹರಡದಂತೆ ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲೆಡೆ ಕಣ್ಗಾವಲು ಬಿಗಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ 890 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, 28 ದಿನಗಳಲ್ಲಿ 258 ಜನರ ಫಲಿತಾಂಶ ಹೊರಬೀಳಲಿದೆ. ಉಳಿದ 622 ಜನರನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ಮುಂದುವರಿಸಲಾಗುವುದು. ಈ ವ್ಯಕ್ತಿಗಳು ಕೋವಿದ್ -19 ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸಿದ್ದರು ಎಂದರು.
ನಂತರ, ಈ ಸಂಬಂಧ ಲಿಖಿತ ಉತ್ತರ ನೀಡಿದ ಅವರು ಇಲ್ಲಿಯವರೆಗೆ ವಿಮಾನ ನಿಲ್ದಾಣಗಳಲ್ಲಿ 87066 ಪ್ರಯಾಣಿಕರನ್ನು ತಪಾಸಣೆಗೊಳಪಡಿಲಾಗಿದೆ. ಮಂಗಳೂರು ಹಾಗೂ ಕಾರವಾರದ ಬಂದರಿನಲ್ಲಿ 5256 ಮಂದಿಯ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದರು.
ಸೋಂಕಿನ ವಿರುದ್ಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರೋಗ ನಿಯಂತ್ರಕ ಸಮಿತಿಗಳನ್ನು ಸ್ಥಾಪಿಸಲಾಗಿದೆ.
ಬೆಂಗಳೂರಿನಲ್ಲಿ ರಕ್ತದ ಮಾದರಿಗಳನ್ನು ಪರಿಶೀಲಿಸಲು ಎರಡು ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು, ಮಂಗಳೂರು, ದಾವಣಗೆರೆ , ಕಲಬುರಗಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಕೂಡ ಆರು ಹೊಸ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಅವರು, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಕಾಂಗ್ರೆಸ್ ಸದಸ್ಯ ಶಿವಾನಂದ ಪಾಟಿಲ್, ಎಚ್ 1ಎನ್ 1 ಕಾಯಿಲೆ ಕುರಿತು ಆತಂಕ ವ್ಯಕ್ತಪಡಿಸಿದರು.
Source : UNI
Follow us on Social media