ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಇದೇ ತಿಂಗಳ ೨೯ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಎಲ್ಲಾ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಬಿಜೆಪಿಯ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸುನೀಲ್ ವಲ್ಯಾಪುರೆ ಹಾಗೂ ಪ್ರತಾಪ ಸಿಂಹ ನಾಯಕ್ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹ್ಮದ್ ಉಮೇದುವಾರಿಕೆ ಸಲ್ಲಿಸುವಾಗ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಜೆಡಿಎಸ್ ಅಭ್ಯರ್ಥಿ ಇಂಚರ ಗೋವಿಂದರಾಜು ಪಕ್ಷದ ಮುಖಂಡರಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಹೊರಟ್ಟಿ ಮತ್ತಿತರರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಪಕ್ಷೇತರ ಅಭ್ಯರ್ಥಿಯಾಗಿ ಯಡವನಹಳ್ಳಿ ಪಿ.ಸಿ.ಕೃಷ್ಣೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಪಕ್ಷೇತರ ಅಭ್ಯರ್ಥಿ ನಾಮಪತ್ರಕ್ಕೆ ಶಾಸಕರು ಸೂಚಕರಾಗಿ ಸಹಿ ಹಾಕಿಲ್ಲ. ಹೀಗಾಗಿ ಅವರ ನಾಮಪತ್ರ ತಿರಸ್ಕೃತವಾಗುವ ಸಂಭವವಿದೆ. ಉಳಿದ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದರೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.
Follow us on Social media