ತುಮಕೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವಂತಿದ್ದರೆ ಮೊದಲ ಹಂತದಲ್ಲಿ ಪಿಯುಸಿ, ಪ್ರೌಢಶಾಲೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದಾದ ನಂತರ ಮಾಧ್ಯಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು, ಬಳಿಕ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.
ಶಾಲಾ-ಕಾಲೇಜುಗಳನ್ನು ತೆರೆಯುವ ದಿನಾಂಕದ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಆಗಸ್ಟ್ ತಿಂಗಳ ನಂತರವಷ್ಟೇ ಈ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಆರಂಭಿಸುವುದಾಗಿ ಸ್ಪಷ್ಟಪಡಿಸಿದರು.
ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಶಾಲಾ ಆರಂಭ ದಿನದ ಕುರಿತು ನಾವು ಕೂಡ ಇನ್ನು ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲಿಲ್ಲ ಎಂದರು.
ರಾಜ್ಯದಲ್ಲಿ ಅನುದಾನ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ವೇತನ ಕೊಡುವ ಬಗ್ಗೆ ಸಂಘದ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದ್ದಾರೆ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ನಂತರ ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕಾಗಿ ಶಿಕ್ಷಣ ಇಲಾಖೆ ಕಾರ್ಯಕ್ರಮವನ್ನು ರೂಪಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.
Follow us on Social media