ಬೆಂಗಳೂರು: ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್ಬುಕ್, ಇನ್ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸೈಬರ್ ಕ್ರೈಂ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಸಾಮಾಜ ಸ್ವಾಸ್ಥ್ಯ ಕಾಪಾಡಲು ನಾವು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಆದ್ದರಿಂದ ನಾನು ಈ ಕುರಿತು ತಾಂತ್ರಿಕ ತಜ್ಞರ ಜೊತೆಯೂ ಚರ್ಚೆಯೂ ಮಾಡಿ ತೀರ್ಮಾನ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರ ರಕ್ಷಣೆ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹಸಚಿವರು, ನಾವು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಸಂಪೂರ್ಣ ರಕ್ಷಣೆ ನೀಡಲಾಗುವುದು. ಈಗಾಗಲೇ ಈ ಕುರಿತು ತಾವು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದು, ಅವರ ಕುಟಂಬಕ್ಕೂ ಪೊಲೀಸ್ ಭದ್ರತೆ ಒದಗಿಸುತ್ತೇವೆ ಎಂದರು.
Follow us on Social media