Breaking News

ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಪತ್ರ

ಬೆಂಗಳೂರು: ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ  ಪತ್ರ ಬರೆದು ಮನವಿಮಾಡಿದ್ದಾರೆ.

ಇದಲ್ಲದೇ ಪಿಯುಸಿ ಇಂಗ್ಲೀಷ್ ಪತ್ರಿಕೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಎಲ್ಲಾ ಉಪ್ಯಾಸಕರು ಪಾಲ್ಗೊಳ್ಳಬೇಕು ಎಂದು ಮತ್ತೊಂದು ಪತ್ರ ಬರೆದಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸಚಿವರು, ಪರೀಕ್ಷೆಯನ್ನು ಅತ್ಯಂತ  ಸುರಕ್ಷಿತವಾಗಿ ಹಾಗೂ ಮಕ್ಕಳ ಶ್ರೇಯಸ್ಸಿಗೆ ಪೂರಕವಾಗಿ ನಡೆಯಲು ಎಲ್ಲ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಾಮರ್ಥ್ಯದ ಓರೆಗಲ್ಲಾಗಿರುವ ಈ ಬಾರಿಯ ಪರೀಕ್ಷೆಯನ್ನು ಸುಗಮವಾಗಿ ನಿರ್ವಹಣೆ ಮಾಡಲು ತಾವು ಸಹಕರಿಸಬೇಕು  ಎಂದು ಕೋರಿದ್ದಾರೆ.

ವಿದ್ಯಾರ್ಥಿಗಳ ನಡುವೆ ವೈಕ್ತಿಗತ ಅಂತರ ಅಂತರ ಕಾಪಾಡುವುದು ಸೇರಿದಂತೆ ಇಲಾಖೆ ಕೈಗೊಂಡಿರುವ ಉಪಕ್ರಮಗಳನ್ನು ಪಾಲಿಸಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್  ಸೇರಿದಂತೆ ಬಹುತೇಕ ಸಂಘ ಸಂಸ್ಥೆಗಳು ಸರ್ಕಾರದ ಜತೆ ಕೈ ಜೋಡಿಸಿವೆ. ಪರೀಕ್ಷೆ ಸಂದರ್ಭದಲ್ಲಿ ಅನಾರೋಗ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಇದರಿಂದ ಇತರೆ ವಿದ್ಯಾರ್ಥಿಗಳ ಹಿತ ರಕ್ಷಣೆ ಸಾಧ್ಯವಾಗಲಿದೆ., ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ  ತಪಾಸಣೆಗಾಗಿ ಸೂಕ್ತ ವ್ಯವಸ್ಥೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರನ್ನು ಭೇಟಿ ಮಾಡಿ ಪರೀಕ್ಷೆ ಕುರಿತು ಆತ್ಮ ವಿಶ್ವಾಸ ತುಂಬಬೇಕು ಎಂದು ಸುರೇಶ್ ಕುಮಾರ್ ಕೋರಿದ್ದಾರೆ. 

ಇದೇ ಸಂದರ್ಭದಲ್ಲಿ ಉಪನ್ಯಾಸಕ ಸಮುದಾಯಕ್ಕೆ ಮತ್ತೊಂದು ಪತ್ರ ಬರೆದಿರುವ ಸುರೇಶ್ ಕುಮಾರ್, ಪಿಯುಸಿ ಇಂಗ್ಲಿಷ್ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಬಾಕಿ ಉಳಿದಿರುವ ಇಂಗ್ಲೀಷ್ ಪತ್ರಿಕೆಯ ಉತ್ತರ  ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುವುದು. ಹಾಗೆಯೇ ಮೌಲ್ಯಮಾಪಕರ ಹಿತವನ್ನೂ ಕಾಯಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×