ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜಸ್ಥಾನ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರಕ್ಕೆ ಮುಂದೂಡಿದೆ.
ಸಚಿನ್ ಪೈಲಟ್ ಹಾಗೂ ಇತರ 18 ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಸಿ. ಪಿ. ಜೋಷಿ ಅವರು ನೋಟಿಸ್ ನೀಡಿದ್ದು, ಇದನ್ನು ಪ್ರಶ್ನಿಸಿ ಪೈಲಟ್ ಬಣ ಹೈಕೋರ್ಟ್ ಮೆಟ್ಟಿಲೇರಿದೆ.
ಇಂದು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಇಂದ್ರಜೀತ್ ಮಹಂತಿ ಹಾಗೂ ನ್ಯಾಯಮೂರ್ತಿ ಪ್ರಕಾಶ್ ಗುಪ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಮಂಗಳವಾರದವರೆಗೆ ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸ್ಪೀಕರ್ ಸಿಪಿ ಜೋಶಿ ಅವರಿಗೆ ಸೂಚಿಸಿದೆ.
ಜುಲೈ 21ರ ವರೆಗೆ ಬಂಡಾಯ ಶಾಸಕರ ವಿರುದ್ಧ ಸ್ಪೀಕರ್ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೋರ್ಟ್ ಭರವಸೆ ನೀಡಿದ ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ಸೋಮವಾರ ಬೆಳಗ್ಗೆ 10.30ಕ್ಕೆ ತಮ್ಮ ವಾದ ಮುಂದುವರೆಸುವುದಾಗಿ ಹೇಳಿದ್ದಾರೆ.
ಇನ್ನು ಪೈಲಟ್ ಬಣದ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು, ವಿಧಾನಸಭೆ ಅಧಿವೇಶನ ನಡೆದ ಸಂದರ್ಭದಲ್ಲಿ ಮಾತ್ರ ವಿಪ್ ಅನ್ವಯವಾಗುತ್ತದೆ. ಹೀಗಾಗಿ ಸ್ಪೀಕರ್ ನೀಡಿರುವ ಈ ನೋಟಿಸ್‌ಗೆ ಯಾವುದೇ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂದರು.
ಸಚಿನ್ ಪೈಲಟ್ ಪರ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹಟಗಿ ವಾದ ಮಂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಪರ ಮತೋರ್ವ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ.
Follow us on Social media