ಲಕ್ನ : ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ನಂತರ ಉತ್ತರ ಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಇದರೊಂದಿಗೆ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ಉತ್ತರಪ್ರದೇಶದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಯೋಗಿ ಪಾತ್ರರಾಗಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಯೋಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಹಿರಿಯ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ, ಲಕ್ನೋದಲ್ಲಿ ಸುಮಾರು 85 ಸಾವಿರ ಜನರು ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭವ್ಯವಾದ ವೇದಿಕೆಯನ್ನು ನಿರ್ಮಿಸಲಾಗಿದ್ದು, `ನ್ಯೂ ಯುಪಿ ಆಫ್ ನ್ಯೂ ಇಂಡಿಯಾ (ನಯೇ ಭಾರತ್ ಕಾ ನಯಾ ಯುಪಿ)’ ಎಂಬ ಘೋಷಣೆಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಲಾಗಿದೆ.ಉತ್ತರ ಪ್ರದೇಶದಲ್ಲಿ 2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಾಗ ಸನ್ಯಾಸಿ-ರಾಜಕಾರಣಿ ಯೋಗಿ ಆದಿತ್ಯನಾಥ್ ಅವರು ಅಚ್ಚರಿ ಎಂಬಂತೆ ಸಿಎಂ ಹುದ್ದೆಗೆ ಆಯ್ಕೆಯಾಗಿದ್ದರು.
Follow us on Social media