ಕೊಚ್ಚಿ: ಕೇರಳದ 30 ಕೆ.ಜಿ. ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ಸೂಚಿಸಿದ ಮಾರನೇ ದಿನವೇ ಎನ್ಐಎ ಸ್ವಪ್ನಾ ಸುರೇಶ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದೆ.
ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವಾಲಯ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ತನಿಖೆ ನಡೆಸುವಂತೆ ಎನ್ಐಎಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎನ್ಐಎ ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸರಿತ್ ಕುಮಾರ್ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರ ವಿರುದ್ಧ ಇಂದು ಎಫ್ಐಆರ್ ದಾಖಲಿಸಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಉಗ್ರ ಕೃತ್ಯಗಳೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಲು ಎನ್ಐಎ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿದೆ.
ಆರೋಪಿಗಳು ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಿಸುವುದು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಚು ರೂಪಿಸಿರುವ ಬಗ್ಗೆ ಎನ್ಐಎ ತನಿಖೆ ನಡೆಸಲಿದೆ.
ಸಂಘಟಿತ ಕಳ್ಳಸಾಗಣೆ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು. ಹಾಗಾಗಿ, ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ನಡೆದ ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದೆ ಎಂದು ನಿನ್ನೆ ಕೇಂದ್ರ ಗೃಹಸಚಿವಾಲಯದ ವಕ್ತಾರರು ತಿಳಿಸಿದ್ದರು.
Follow us on Social media