ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಬೀದರ್, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒ ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿರುವ ಅವರು, ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು ಕೇಂದ್ರದಲ್ಲಿ ಮೊಕ್ಕಾಂ ಹೂಡಿ ಕೊರೋನಾ ನಿಯಂತ್ರಣಕ್ಕೆ ಸೂಕ್ರ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬರುವ ಜೂ.8ರಿಂದ ಸಡಿಲಿಕೆಗಳನ್ನು ಮಾಡುತ್ತಿರುವ ಕಾರಣ ಕಟ್ಟೆಚ್ಚರ ವಹಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ತಾಲೂಕು ಕೇಂದ್ರಗಳಲ್ಲಿ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡಬೇಕು. ತಾಲೂಕುಗಳನ್ನು ವಿಭಾಗಿಸಿಕೊಂಡು ಕೆಲಸ ಮಾಡುವಂತೆ ಸೂಚಿಸಿದರು. ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ವಲಸಿಗರಿಂದ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್-19 ಪರೀಕ್ಷಾ ಕಿಟ್ ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಹೋಮ್ ಕ್ವಾರಂಟೈನ್ ನಲ್ಲಿರುವವರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕೆಂದು ತಿಳಿಸಿದರು.
Follow us on Social media