ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಿರಾತಂಕವಾಗಿ ಸಾಗುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು ಅವರು ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ ವಿದ್ಯಾರ್ಥಿಗಳನ್ನು ಮಾತನಾಡಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಎಸ್ ಎಸ್ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ ಈ ವರ್ಷ ಬಹಳ ವ್ಯತ್ಯಾಸ ಕಂಡುಬರುತ್ತಿಲ್ಲ. ಮಕ್ಕಳು ಉತ್ಸಾಹದಿಂದ ಬರೆಯುತ್ತಿದ್ದಾರೆ ಪರೀಕ್ಷಾ ಕೇಂದ್ರಗಳ ಬಗ್ಗೆ ಮಕ್ಕಳು ಮತ್ತು ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದರು.
ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ ಅಂತ್ಯಕ್ಕೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಆನ್ ಲೈನ್ ಶಿಕ್ಷಣ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ ಎಂದರು.
ಆನ್ ಲೈನ್ ಶಿಕ್ಷಣದ ಬಗ್ಗೆ ರಾಜ್ಯ ಸರ್ಕಾರ ರಚಿಸಿರುವ ತಜ್ಞರ ಸಮಿತಿ ವರದಿ ಸಲ್ಲಿಸಿದ ಬಳಿಕ ಎಲ್ಲ ವಯೋಮಾನದ ವಿದ್ಯಾರ್ಥಿಗಳ ಅವಶ್ಯಕತೆಗನುಗುಣವಾಗಿ ನಿರ್ದಿಷ್ಟ ರೂಪುರೇಷೆ, ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸಲಾಗುವುದು ಎಂದರು.
ಶಾಲಾರಂಭದ ಬಗ್ಗೆ ಸರ್ಕಾರ ಇನ್ನೂ ನಿರ್ಣಯ ಕೈಗೊಂಡಿಲ್ಲ. ಈ ಬಾರಿ ಯಾವುದೇ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡಬಾರದು. ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಕಡಿವಾಣ ಹಾಕಲಾಗಿದೆ. ಕೊರೋನಾ ಸೋಂಕು ಇರುವುದರಿಂದ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಒಂದ ವೇಳೆ ಶುಲ್ಕ ಹೆಚ್ಚಳ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
Follow us on Social media