ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಇಂದು ಫೇಸ್ ಬುಕ್ ಲೈವ್ ನಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಕೊರೋನಾ ಕಟ್ಟಿಹಾಕಲು ಲಾಕ್ ಡೌನ್ ಒಂದೇ ಪರಿಹಾರವಲ್ಲ. ಈ ಹೋರಾಟದಲ್ಲಿ ಜನರು ಸಹ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ದೇಶದೆಲ್ಲೆಡೆ ಕೊರೋನಾ ವೈರಸ್ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಹಾಗೂ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ, ಇದನ್ನು ತೊಲಗಿಸಲು ಲಾಕ್‍ಡೌನ್ ಒಂದೇ ಪರಿಹಾರವಲ್ಲ. ಜನರು ಕೋವಿಡ್ ತೊಲಗಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮಾಸ್ಕ್ಗಳನ್ನು ಪ್ರತಿಯೊಬ್ಬರು ಕಡ್ಡಾಯ ಧರಿಸಬೇಕು ಎಂದು ಹೇಳಿದರು.
ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲೂ ಲಾಕ್ ಡೌನ್ ಇರುವುದಿಲ್ಲ. ಅರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸುವುದು ಮುಖ್ಯ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
Follow us on Social media