ಬೆಂಗಳೂರು: 15 ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಹೆಬ್ಬಾಳದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಬ್ಬಾಳ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 55 ವರ್ಷದ ಶಿಕ್ಷಕ, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಹೇಳಿದರು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಶಿಕ್ಷಕನ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಚಿಕ್ಕಬಳ್ಳಾಪುರದವನಾದ ಶಿಕ್ಷಕನಿಗೆ ಮದುವೆಯಾಗಿ, ಮಕ್ಕಳಿದ್ದಾರೆ. ಶಿಕ್ಷಕನ ಕೃತ್ಯದ ಬಗ್ಗೆ ಕೆಲ ಬಾಲಕಿಯರಿಂದ ಹೇಳಿಕೆ ಪಡೆಯಲಾಗಿದೆ ಎಂದರು.
ಆಟ ಹಾಗೂ ಪಾಠದ ನೆಪದಲ್ಲಿ ಬಾಲಕಿಯರನ್ನು ತನ್ನ ಬಳಿ ಕರೆಸಿಕೊಳ್ಳುತ್ತಿದ್ದ ಆರೋಪಿ ವಿದ್ಯಾರ್ಥಿನಿಯರಿಗೆ ಮುತ್ತು ಕೊಡುವುದು ಹಾಗೂ ಮೈ–ಕೈ ಹಾಗೂ ಇತರೆ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಶಾಲೆಯ 8 ಹಾಗೂ 9ನೇ ತರಗತಿಯ 15 ಬಾಲಕಿಯರಿಗೆ ಆರೋಪಿ ಕಿರುಕುಳ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ. ಕೃತ್ಯಕ್ಕೆ ಸಂಬಂಧಪಟ್ಟ ಪುರಾವೆಗಳನ್ನೂ ಸಂಗ್ರಹಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದರು. Source : The New Indian Express
Follow us on Social media