Breaking News

ಬೆಳಗಾವಿ,ಬಾಗಲಕೋಟೆಯಲ್ಲಿ ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ

ಬೆಂಗಳೂರು:ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮಂಗಳವಾರ ಬೆಳಗಾವಿ,  ಬಾಗಲಕೋಟೆ  ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು  ವೈಮಾನಿಕ  ಸಮೀಕ್ಷೆ ಮೂಲಕ ಪರಿಶೀಲಿಸಿದರು.

ಕಂದಾಯ ಸಚಿವ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಜೊತೆಗಿದ್ದರು. ಬಳಿಕ ಹೆಲಿಕಾಪ್ಟರ್ ಮೂಲಕ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ತೆರಳಿ ಅಲ್ಲಿ ಲಾಲ್ ಬಹದ್ದೂರು ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದರು.

ತದನಂತರ  ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು ಮತ್ತು ಜಿಲ್ಳಾಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಇದಕ್ಕೂ ಮುನ್ನ ನಡೆದ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಬೆಳಗಾವಿ ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ 
ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ.  ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. 
ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಲಭ್ಯವಿದ್ದು,  ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. 

ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44,156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ. ಧಾರವಾಡ ಜಿಲ್ಲೆಯ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-೧೯ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಹ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದರು.ಕಂದಾಯ ಸಚಿವ ಆರ್.ಅಶೋಕ, ಕಳೆದ ವರ್ಷದ ಮನೆಪರಿಹಾರ ನೀಡುವ ತಂತ್ರಾಂಶ ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ,ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್,  ಪ್ರವಾಹ ನಿರ್ವಹಣೆ ಮತ್ತು ಪರಿಹಾರ ಕ್ರಮಗಳ ಕುರಿತು ಬೆಳಕು ಚೆಲ್ಲಿದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×