ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯವಾಗಿ ಏರಿಕೆ ಕಂಡ ಬೆನ್ನಲ್ಲೇ ಜುಲೈ 23ರ ಬೆಳಗ್ಗೆ 5 ಗಂಟೆವರೆಗೂ ಹೇರಲಾಗಿರುವ ಲಾಕ್ ಡೌನ್ ನ್ನು ಮತ್ತೆ ವಿಸ್ತರಣೆ ಮಾಡಬೇಕು ಎನ್ನುವ ಒತ್ತಾಯ ಕೇಳಿಬಂದಿದ್ದು, ಈ ಹಿನ್ನಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಅಗತ್ಯತೆಯ ಕುರಿತು ನಾಳೆಯೊಳಗೆ (ಬುಧವಾರ) ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಈ ಕುರಿತು ಜು.21 ರ ಮಂಗಳವಾರ ಸಂಜೆ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ನಾಳೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಲಾಕ್ ಡೌನ್ ಕುರಿತಂತೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಒಂದೆಡೆ ಸೋಂಕು ತಡೆಗಟ್ಟಲು ಲಾಕ್ ಡೌನ್ ಒಂದೇ ಪರಿಹಾರವಲ್ಲ ಎನ್ನುವ ಚರ್ಚೆಗಳೂ ಕೇಳಿಬರುತ್ತಿವೆ. ಇನ್ನೊಂದೆಡೆ ಜಿಲ್ಲೆಯ ಜನಪ್ರತಿನಿಧಿಗಳ ಸಹಿತ ಸಾರ್ವಜನಿಕರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಿಸುವಂತೆ ಬೇಡಿಕೆ ಬರುತ್ತಿದೆ.
ನಿರಂತರ 7 ದಿನಗಳ ಕಾಲ ಲಾಕ್ ಡೌನ್ ಮಾಡಿದ್ರು, ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಇಳಿಕೆ ಕಾಣದ ಕಾರಣ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೋಟಾ ತಿಳಿಸಿದ್ದಾರೆ.
Follow us on Social media