ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ರಾಜಸ್ಥಾನ ಕಾಂಗ್ರೆಸ್ ನಲ್ಲಿ ರೆಬೆಲ್ ನಾಯಕರಾಗಿ ಗುರುತಿಸಿಕೊಂಡಿದ್ದ ಸಚಿನ್ ಪೈಲಟ್ ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಾಜಸ್ಥಾನ ಅಧಿವೇಶನಕ್ಕೆ ಕೇವಲ 4 ದಿನಗಳು ಬಾಕಿ ಇರುವಂತೆ, ಕಾಂಗ್ರೆಸ್ ನಿಂದ ಒಂದು ಕಾಲು ಹೊರಗೆ ಇಟ್ಟಿದ್ದ ಸಚಿನ್ ಪೈಲಟ್ ಇದೀಗ ಕಾಂಗ್ರೆಸ್ ಮುಂಚೂಣಿ ನಾಯಕರನ್ನು ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ. ಇಂದು ಮಧ್ಯಾಹ್ನ ಸಚಿನ್ ಪೈಲಟ್ ಅವರು, ದೆಹಲಿಯಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿ ರಾಹುಲ್ ಮತ್ತು ಪ್ರಿಯಾಂಕಾ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಸಚಿನ್ ಪೈಲಟ್ ತಾವು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆಗುವ ಮತ್ತು ತಮ್ಮ, ತಮ್ಮ ಬೆಂಬಲಿಗ ಶಾಸಕರ ಸ್ಥಾನಮಾನದ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಗೆಹ್ಲೂಟ್ ಸರ್ಕಾರದ ಉಪ ಮುಖ್ಯಮಂತ್ರಿಯಾಗಿದ್ದ ಸಚಿನ್ ಪೈಲಟ್ ರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಅಲ್ಲದೆ ರಾಜಸ್ಥಾನ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನದಿಂದಲೂ ತೆಗೆದುಹಾಕಲಾಗಿತ್ತು. ಹೀಗಾಗಿ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿತ18 ಶಾಸಕರ ಬಣ ರೆಸಾರ್ಟ್ ಸೇರಿಕೊಂಡು ರಾಜಕೀಯ ತಂತ್ರಗಾರಿಕೆ ಹೆಣೆದಿತ್ತು.
Follow us on Social media