ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 61 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1714 ಹೊಸ ಪ್ರಕರಣಗಳು ವರದಿಯಾಗಿದ್ದು,
ರಾಜ್ಯದಲ್ಲಿ ಒಟ್ಟು 3649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ.
ಇನ್ನು ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಕಳೆದ 24 ಗಂಟೆಗಳಲ್ಲಿ 1664 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
ಇಂದು ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 1,664 ಜನ ಗುಣಮುಖರಾಗಿದ್ದು, ಬೆಂಗಳೂರಿನಲ್ಲಿ 520 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.
Follow us on Social media