ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾತ್ಮಕ ರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಆರೋಪಿ ನವೀನ್ ನನ್ನು ಬಂಧಿಸಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪು ಕಳೆದ ರಾತ್ರಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಮೇಲೆ ಏಕಾಏಕಿ ದಾಳಿ ನಡೆಸಿ ತೀವ್ರ ದಾಂಧಲೆ ನಡೆಸಿತ್ತು.
ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ ಸುಮಾರು 60 ಮಂದಿ ಪೊಲೀಸ್ ಸಿಬ್ಬಂದಿ ಗಲಭೆಯಲ್ಲಿ ಗಾಯಗೊಂಡಿದ್ದಾರೆ. ಈ ಸಂಬಂಧ ಇದುವರೆಗೆ 110 ಮಂದಿಯನ್ನು ಬಂಧಿಸಲಾಗಿದೆ. ಜನರು ಗಲಭೆ ಸೃಷ್ಟಿಸದೆ ಶಾಂತಿ ಕಾಪಾಡುವಂತೆ ಹೇಳಿದ್ದಾರೆ.
