ಕಲಬುರಗಿ: ಕೊರೋನಾ ವೈರಸ್ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ನೀಡಿ ಕೆಲವೊಂದು ಅಂಗಡಿ- ವಾಣಿಜ್ಯ ಮಳಿಗೆಗಳನ್ನು ತೆರೆಯಲು ನೀಡಲಾದ ಅನುಮತಿಯನ್ನು ಜಿಲ್ಲಾಧಿಕಾರಿ ಶರತ್ ಅಬಿ ಅವರು ವಾಪಸ್ಸು ಪಡೆದು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಕಲಬುರಗಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ನೀಡಿ ಬುಧವಾರ ಕೆಲವೊಂದು ಅಂಗಡಿ-ವಾಣಿಜ್ಯ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಆದರೆ, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ದೃಷ್ಠಿಯಿಂದ ಜಿಲ್ಲಾಧಿಕಾರಿ ಈ ಸಡಿಲಿಕೆ ಆದೇಶ ಹಿಂಪಡೆದಿದ್ದಾರೆ.
ಈ ಹಿಂದೆ ಜಿಲ್ಲೆಯಲ್ಲಿ ಮಹಾಮಾರಿ ಕೊರೋನ ಸೋಂಕು ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದರೂ ಬಟ್ಟೆ ಅಂಗಡಿ ಮತ್ತು ಹೊಟೇಲ್ ಗಳಲ್ಲಿ ಪಾರ್ಸಲ್ ಸೇರಿದಂತೆ ಕೆಲವೊಂದು ಸೇವೆಗಳನ್ನು ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿದ್ದರು.ವಾಣಿಜ್ಯ ಅಂಗಡಿ ಹಾಗೂ ಮಳಿಗೆಗಳಲ್ಲಿ ಜಿಲ್ಲಾದ್ಯಂತ ಕನಿಷ್ಠ ಸಿಬ್ಬಂದಿಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಹ್ಯಾಂಡ್‍ವಾಶ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಸುವ ಷರತ್ತುಗೊಳಪಟ್ಟು ಮಳಿಗೆಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಆದರೆ ಜನತೆ ಸುರಕ್ಷಿತ ಅಂತರ ಕಾಪಾಡದ ಹಿನ್ನೆಲೆ ಹಾಗೂ ಕೊರೋನ ಪೀಡಿತರ ಸಂಖ್ಯೆ ಏರಿಕೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಈ ಆದೇಶ ವಾಪಸ್ ಪಡೆಯಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಮಟ್ಟದಲ್ಲಿ ಚರ್ಚಿಸಿ ಜಿಲ್ಲಾಧಿಕಾರಿ ಶರತ್ ಈ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Follow us on Social media