ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 108 ಆಂಬ್ಯುಲೆನ್ಸ್ ಸೇವೆಗಳ ನೂತನ 262 ಗಳನ್ನು ಗುರುವಾರ ವಿಧಾನಸೌಧ ಮುಂದೆ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಅಂಬ್ಯುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದರು. 82.02 ಕೋಟಿ ರೂಪಾಯಿ ವೆಚ್ಚದಲ್ಲಿ 262 ಆಂಬ್ಯುಲೆನ್ಸ್ ಗಳು ಖರೀದಿಸಲಾಗಿದೆ. 262 ಪೈಕಿ 157 ಅಂಬ್ಯುಲೆನ್ಸ್ಗಳಲ್ಲಿ ಬಿಎಲ್ ಎಸ್ (Basic life support) ಹಾಗೂ 105 ಅಂಬ್ಯುಲೆನ್ಸ್ ಅಡ್ವಾನ್ಸ್ ಲೈಫ್ ಸಪೋರ್ಟ್ (ALS ) ಸೌಲಭ್ಯವಿದ್ದು, ಹೃದಯ ಮತ್ತು ಉಸಿರಾಟದ ತುರ್ತು ಪರಿಸ್ಥಿಗಳಲ್ಲಿ ಇವು ಸಹಕರಿಯಾಗಿವೆ.
ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದರು.
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎಂಬ ಕಾರಣಕ್ಕೆ ತುರ್ತು 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಅಂಬ್ಯುಲೆನ್ಸ್ ಗಳ ಅಗತ್ಯವಿದೆ. ಪ್ರತಿ ತಾಲ್ಲೂಕಿನಲ್ಲಿ 4 ಅಂಬ್ಯುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತಿ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.
Follow us on Social media