ಬೆಂಗಳೂರು : ಲಾಕ್”ಡೌನ್’ನಿಂದಾಗಿ ಜನತೆಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ರಾಜ್ಯಕ್ಕೆ ರೂ.50 ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಮತ್ತು ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ವಿಧಾನಸಬೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿವಿಧ ಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗ ನಿನ್ನೆ ಮುಖ್ಯಮಂತ್ರಿ ಯಿಯೂರಪ್ಪ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳ ಹಕ್ಕೊತ್ತಾಯದ ಫತ್ರವನ್ನು ಸಲ್ಲಿಸಿತು. ಇದೇ ವೇಳೆ ಕೊರೋನಾ ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.
ಮನುಕುಲವನ್ನು ಮಾರಣಾಂತಿಕವಾಗಿ ಕಾಡುತ್ತಿರುವ ಕೊರೋನಾ ಸೋಂಕು ವಿಶ್ವವ್ಯಾಪಿ ಹರಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ರಾಜ್ಯ ಸರ್ಕಾರ ಆಗ್ರಹಿಸಬೇಕು. ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಸುಮಾರು 3 ಸಾವಿರ ಕೋಟಿ ಗಿಂದ ಹೆಚ್ಚು ಹಣ ಹೋಗಿದೆ. ಈ ಕುರಿತು ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಪಿಎಂ ಕೇರ್ಸ್ ನಿಧಿಗೆ ಹೋಗಿರುವ ಹಣವನ್ನು ಹಿಂತಿರುಗಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಲಾಕ್’ಡೌನ್ ನಿಂದಾಗಿ ರಾಜ್ಯಕ್ಕೆ ಎದುರಾಗಿರುವ ನಷ್ಟ ಎದುರಿಸಲು ರಾಜ್ಯ ಸರ್ಕಾರ ಕೇಂದ್ರದಿಂದ ರೂ.50 ಸಾವಿರ ವಿಶೇಷ ಪ್ಯಾಕೇಜ್ ಕೇಳಬೇಕು. ಪ್ರಸ್ತುತ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 1,610 ಕೋಟಿ ಪ್ಯಾಕೇಜ್ ಕೆಲ ಸಂಕಷ್ಟದಲ್ಲಿರುವ ಜನರಿಗೆ ಮಾತ್ರ ಸಹಾಯಕವಾಗಲಿದೆ. ಈ ಪರಿಹಾರ ಅವೈಜ್ಞಾನಿಕವಾದದ್ದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಜೆಡಿಎಸ್ ನಾಯಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿಗಳಿಗೆ ಪ್ರತೀನಿತ್ಯ ರೂ.200 ನೀಡಬೇಕು ಎಂದು ಆಗ್ರಹಿಸಿದರು.
ಚರ್ಚೆ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿಕೆ,ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜೆಡಿಎಸ್ ರಾಜ್ಯಾಧ್ಯಕ್ಷ ಡಾ.ಎಂ.ಪಿ.ನಾಡಗೌಡ, ಸಿಪಿಎಂ ನಾಯಕ ಜಿಎನ್. ನಾಗರಾಜ್, ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
Follow us on Social media