ಬೆಂಗಳೂರು: ತಮ್ಮ ಕ್ಷೇತ್ರಗಳಿಗೆ ಅನುದಾನದ ಕೊರತೆ ಎದುರಾಗಿದ್ದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿಯ ಶಾಸಕರ ನಿಯೋದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ದೂರು ನೀಡಿದ್ದಾರೆ.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ್ ಬೆಲ್ಲದ, ಭರತ್ ಶೆಟ್ಟಿ, ಅಭಯ್ ಪಾಟೀಲ್, ಅನಿಲ್ ಬೆನಕೆ, ವೇದವ್ಯಾಸ ಕಾಮತ್ ಮೊದಲಾದವರು ನಿಯೋಗದಲ್ಲಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.
ಪಕ್ಷದಲ್ಲಿ ಮುಖ ನೋಡಿ ಅನುದಾನ ನೀಡಲಾಗುತ್ತಿದೆ. ತಮ್ಮ ಕ್ಷೇತ್ರಗಳಿಗೆ ಅನುದಾನವೇ ಸಿಗುತ್ತಿಲ್ಲ. ಹೀಗಾದರೆ ನಾವು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ನಿಭಾಯಿಸುವುದು ಹೇಗೆ ಎಂದು ಶಾಸಕರು ಪ್ರಶ್ನಿಸಿದ್ದಾರೆನ್ನಲಾಗುತ್ತಿದೆ.
ದೂರು ಹಿನ್ನೆಲೆಯಲ್ಲಿ ಶಾಸಕರ ಸಮಸ್ಯೆಗಳನ್ನು ಆಲಿಸಲು ವಿಭಾಗದವರು ಪಕ್ಷದ ಶಾಸಕರ ಸಭೆ ಕರೆಯಬೇಕು. ನಂತರ ಶಾಸಕಾಂಗ ಪಕ್ಷದ ಸಭೆ ಕರೆದು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳಲು ಅವಕಾಶ ಕಲ್ಪಿಸಬೇಕು ಎಂದು ಕಟೀಲ್ ಅವರನ್ನು ಶಾಸಕರು ಆಗ್ರಹಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಸ್ವಪಕ್ಷ ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಈ ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಅಲ್ಲದೆ, ಶಾಸಕರ ವಿಭಾಗವಾರು ಸಭೆ ಹಾಗೂ ಶಾಸಕಾಂಗ ಪಕ್ಷದ ಸಭೆ ಕರೆಯುವ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು ಎಂದು ತಿಳಿದುಬಂದಿದೆ
Follow us on Social media