ಮುಂಬೈ: ಬಾಕಿ ಉಳಿದರುವ ಸಿಬಿಎಸ್ ಇ ಮತ್ತು ಐಸಿಎಸ್ ಇ 10ನೇ ಹಾಗೂ 12ನೇ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಜುಲೈ 1ರಿಂದ 15ರ ವರೆಗೆ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್‌ಇ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಕೆಲ ಪೋಷಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಆಂತರಿಕ ಮೌಲ್ಯಮಾಪನ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಬೇಕೆಂದೂ ಈ ಅರ್ಜಿದಾರರು ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ನಿಮ್ಮ ನಿರ್ಧಾರ ತಿಳಿಸುವಂತೆ ಸಿಬಿಎಸ್ ಇ ಮತ್ತು ಐಸಿಎಸ್ ಇಗೆ ಸೂಚನೆ ನೀಡಿತ್ತು.
ಇಂದು ಕೇಂದ್ರ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಾಹಿತಿ ನೀಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೊವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಮಹಾರಾಷ್ಚ್ರ ಮತ್ತು ತಮಿಳುನಾಡು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿವೆ. ಹೀಗಾಗಿ ಸಿಬಿಎಸ್ ಇ ಜುಲೈ 1ರಿಂದ 15ರ ವರೆಗೆ ನಿಗದಿಯಾಗಿದ್ದ 12ನೇ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
12ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಮೂರು ಶಾಲಾ ಪರೀಕ್ಷೆಗಳ ಫಲಿತಾಂಶದ ಆಧಾರದ ಮೇಲೆ ವಾರ್ಷಿದ ಪರೀಕ್ಷೆಯ ಫಲಿತಾಂಶ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಸುಧಾರಣೆ ಮಾಡಿಕೊಳ್ಳಲು ನಂತರ ಪರೀಕ್ಷೆ ಬರೆಯಬಹುದು. ಪರಿಸ್ಥಿತಿಗಳು ಅನುಕೂಲಕರವಾದ ನಂತರ, ಪರೀಕ್ಷೆ ಆಯ್ಕೆ ಮಾಡುವ ವಿದ್ಯಾರ್ಥಿಗಳಿಗೆ ನಾವು ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆಗಳನ್ನು ನಡೆಸಬಹುದು ಎಂದು ಮೆಹ್ತಾ ತಿಳಿಸಿದ್ದಾರೆ.
ಇದೇ ವೇಳೆ ಐಸಿಎಸ್ ಇ ಸಹ 10 ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದೆ ಎಂದು ಮೆಹ್ತಾ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
Follow us on Social media