Breaking News

‘ಎಸ್‌ಡಿಪಿಐಯನ್ನು ನಿಷೇಧಿಸುವ ಧೈರ್ಯ ಬಿಜೆಪಿ ಸರ್ಕಾರಕ್ಕೆ ಇದೆಯೇ’ – ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ”ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐನ್ನು ಯೋಜಿತವಾಗಿ ಬಳಸಿರುವ ಬಿಜೆಪಿಗೆ ನಿಷೇಧಿಸುವ ಧೈರ್ಯ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

”ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಕರ್ನಾಟಕ ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್‌ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ” ಎಂದು ಹೇಳಿದ್ದಾರೆ.

”ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

”ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಬಿ ಎಸ್‌ ಯಡಿಯೂರಪ್ಪನವರ ಪದಚ್ಯುತಿಗೆ ಕೆಲವು ಆರ್‌ಎಸ್‌ಎಸ್‌ನ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ” ಎಂದು ದೂರಿದ್ದಾರೆ.

”ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಎಂದು ಪ್ರಶ್ನಿಸಿರುವ ಅವರು, ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ”  ಎಂದು ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.

”ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ ಕರ್ನಾಟಕದ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ?” ಎಂದು ಕೇಳಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×