Breaking News

ಕರ್ನಾಟಕವನ್ನು ಜಾಗತಿಕ ‘ಬಿಟಿ ಹಬ್’ ಮಾಡಲು ಸರ್ವ ಕ್ರಮ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಆರ್ಥಿಕತೆಯ ಶಕ್ತಿಯಾಗಿರುವ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಎಲ್ಲ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಹಾಗೂ ಕರ್ನಾಟಕವು ಜಾಗತಿಕ ’ಬಿಟಿ ಹಬ್’ ಆಗಿ ಹೊರಹೊಮ್ಮುವುದಕ್ಕೆ ಬೇಕಾದ ಸರ್ವ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬುಧವಾರ ’ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳೆರಡೂ ಬಹಳ ಮುಖ್ಯವಾದವು. ಆರ್ಥಿಕತೆ, ಉದ್ಯೋಗ ಸೃಷ್ಟಿಯಲ್ಲಿ ಇವೆರಡೂ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಹೀಗಾಗಿ ಈ ಎರಡೂ
ಕ್ಷೇತ್ರಗಳಿಗೆ ಸರಕಾರ ಮಹತ್ವ ನೀಡಲಿದೆ ಎಂದು ನುಡಿದರು.

ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದು ಕೈಗಾರಿಕೆ ಪೂರಕ ವಾತಾವರಣವನ್ನು ಸೃಷ್ಟಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ವಾಣಿಜ್ಯ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಮನ್ನಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಒತ್ತಿ ಹೇಳಿದರು.

‘ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ ರಾಜ್ಯದ ಜೈವಿಕ ತಂತ್ರಜ್ಞಾನ ಕ್ಷೇತ್ರದ ಪರಿಧಿಯನ್ನು ಮತ್ತಷ್ಟು ವಿಸ್ತಾರಗೊಳಿಸಲಿದೆ. ದೇಶದ ಬಿಟಿ ರಾಜಧಾನಿ ಆಗಿರುವ ಬೆಂಗಳೂರು ನಗರಕ್ಕೆ ಈ ಪಾರ್ಕ್ ಅನನ್ಯ ಕೊಡುಗೆ ನೀಡುವ ವಿಶ್ವಾಸ ನನಗಿದೆ. ಸರಕಾರವೂ ಈ ಯೋಜನೆಗೆ 150 ಕೋಟಿ ರೂ. ಅನುದಾನ ನೀಡಿದೆ. 150ಕ್ಕೂ ಹೆಚ್ಚು ಕಂಪನಿಗಳು ಈ ಪಾರ್ಕ್
ನಲ್ಲಿ ನೆಲೆಗೊಳ್ಳಲಿವೆ. 100ಕ್ಕೂ ಹೆಚ್ಚು ನವೋದ್ಯಮಗಳು ಸ್ಥಾಪನೆಯಾಗಲಿವೆ. ಇದರಿಂದ 50,000ಕ್ಕೂ ಹೆಚ್ಚು ಜನರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಕೆಲಸ ಸಿಗಲಿದೆ. ರಾಜ್ಯದ ಅರ್ಥವ್ಯವಸ್ಥೆಗೆ ಈ ಯೋಜನೆ ಮಹತ್ವದ ಕಾಣಿಕೆ ನೀಡಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು. 

ಬಿಟಿ ಕ್ಷೇತ್ರದಲ್ಲಿ ಕರ್ನಾಟಕ ದೊಡ್ಡ ಸಾಧನೆಯನ್ನೇ ಮಾಡಿದೆ. ಸದ್ಯಕ್ಕೆ ರಾಜ್ಯದಲ್ಲಿ 380 ಕಂಪನಿಗಳು, 200ಕ್ಕೂ ಹೆಚ್ಚು ನವೋದ್ಯಮಗಳು ಇದರಲ್ಲಿ ತೊಡಗಿಕೊಂಡಿವೆ. ಏಷ್ಯಾದಲ್ಲಿ ಶೇ.9ರಷ್ಟು, ಭಾರತದಲ್ಲಿ ಶೇ.35ರಷ್ಟು ಮಾರುಕಟ್ಟೆ ಪಾಲನ್ನು ನಾವು ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಗಣನೀಯವಾಗಿ ಹೆಚ್ಚಾಗಬೇಕು. ಅದಕ್ಕೆ ಬೇಕಾದ ಎಲ್ಲ
ಸೌಲಭ್ಯಗಳನ್ನು ಒದಗಿಸಲು ಸರಕಾರ ಸಿದ್ಧವಿದೆ ಎಂದು ಅವರು ಪ್ರಕಟಿಸಿದರು.

ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ’ಎರಡು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ ಸಾಕಾರವಾಗುವ ಸಮಯ ಬಂದಿದೆ. ಈಗಾಗಲೇ ಪ್ರಬಲವಾಗಿ ಹೊರಹೊಮ್ಮಿರುವ ರಾಜ್ಯ ಬಿಟಿ ಕ್ಷೇತ್ರಕ್ಕೆ ಈ ಪಾರ್ಕ್ ಮೂಲಕ ಮತ್ತಷ್ಟು ಬಲ ಬರಲಿದೆ. ಸರಕಾರದ ಇಚ್ಛಾಶಕ್ತಿಯಿಂದ ಇದು ಸಾಧ್ಯವಾಗುತ್ತಿದೆ.
ಸಂಶೋಧನೆ, ಅಭಿವೃದ್ಧಿ ಎಲ್ಲವೂ ಒಂದೇ ಸೂರಿನ ಅಡಿಯಲ್ಲಿ ಆಗಲಿದೆ. ಈ ಯೋಜನೆ ಸಾಕಾರಗೊಂಡ ಮೇಲೆ ಜಾಗತಿಕ ಭೂಪಟದಲ್ಲಿ ಬೆಂಗಳೂರಿನ ಪ್ರತಿಷ್ಠೆ ಮತ್ತಷ್ಟು ಹೆಚ್ಚಲಿದೆ
ಎಂದರು. 

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ಈ ಕ್ಷೇತ್ರವಿಲ್ಲದೆ ಈಗ ಮನುಕುಲವನ್ನು ಊಹಿಸಿಕೊಳ್ಳುವುದೇ ಕಷ್ಟ. ಕೃಷಿ, ಕೈಗಾರಿಕೆ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಇದರ ಪ್ರಭಾವ ಇದೆ. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಸರಕಾರ ಅನೇಕ ಸುಧಾರಣಾ ಕ್ರಮಗಳನ್ನು ಜಾರಿ ಮಾಡಿದೆ. ‌ಉದ್ಯಮಸ್ನೇಹಿಯಾದ ಹತ್ತಾರು ಕ್ರಮಗಳನ್ನು ದಿಟ್ಟತನದಿಂದ ಕೈಗೊಂಡಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಹತ್ತುಹಲವು ಕಾನೂನುಗಳನ್ನು ಸರಳಗೊಳಿಸಿ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು. 

ಸಂಶೋಧನೆ ಮತ್ತು ಹೊಸ ಅವಿಷ್ಕಾರಗಳಿಗಿದ್ದ ಕಾನೂನು ತೊಡಕನ್ನು ನಿವಾರಿಸಲಾಗಿದೆ. ’ಕರ್ನಾಟಕ ಇನೋವೆಷನ್ ಅಥಾರಿಟ”ಯನ್ನು ಸ್ಥಾಪಿಸಲಾಗಿದೆ. ’ಇನ್’ವೆಸ್ಟ್ ಕರ್ನಾಟಕ ಮೂಲಕ ಹೂಡಿಕೆಗೆ ಮುಕ್ತ ಅವಕಾಶ ಕಲ್ಪಿ ಸಲಾಗಿದೆ. ದೇಶದ ಯಾವುದೇ ರಾಜ್ಯವೂ ಕೈಕೊಳ್ಳದಂತಹ ಪರಿಣಾಮಕಾರಿ ಕ್ರಮಗಳನ್ನು ಯಡಿಯೂರಪ್ಪ ನೇತೃತ್ವದ ಸರಕಾರ
ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.
.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಶಾಸಕ ಎಂ. ಕೃಷ್ಣಪ್ಪ ಮಾತನಾಡಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಮಣ ರೆಡ್ಡಿ, ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್ ಸಿಇಒ ಚಿರಾಗ್ ಪುರುಷೋತ್ತಮ್ ಯೋಜನೆಯ ಮಾಹಿತಿ ನೀಡಿದರು. ಕರ್ನಾಟಕ ಕೈಗಾರಿಕಾ ತಾಂತ್ರಿಕ ಸಂಸ್ಥೆಯ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×