ಬಳ್ಳಾರಿ: ಕೋವಿಡ್ ನಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಈ ಮಧ್ಯೆ ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವುದು ಸಹಜ. ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ಅವರು ಜನಪ್ರತಿನಿಧಿಯಾಗಿದ್ದು, ಅವರ ಸಮಾರಂಭಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕೂಡ ಹಿಂದಿನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ತಾವು ಹೋದಾಗ ಹೆಚ್ಚಿನ ಜನರು ಇರಲಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆಯಾಗಿದ್ದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ವಿಧಾನ ಪರಿಷತ್ ಟಿಕೆಟ್ ಪೈಪೋಟಿ ವಿಚಾರಕ್ಕೆ ಸಂಬಂಧಿಸಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾಲ್ವರು ಅಭ್ಯರ್ಥಿಗಳ ಹೆಸರುಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಪಕ್ಷಕ್ಕೆ ಬಂದ ವಲಸಿಗರ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತೇವೆ. ಎಲ್ಲರಿಗೂ ನ್ಯಾಯ ಒದಗಿಸುವ ಪ್ರಯತ್ನವನ್ನು ಹೈಕಮಾಂಡ್ ಮಾಡುತ್ತದೆ ಎಂದು ಹೇಳಿದರು.
Follow us on Social media