ಮಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೊರೊನಾ ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂಧರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ.
ಬಿ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ ರೂ.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಎ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇಕಡ 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ. 1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು.
ಆಯುಷ್ಮಾನ್ ಕಾರ್ಡ್‍ನ ಕಾಗದದ ಪ್ರತಿಗೆ ರೂ. 10 ಹಾಗೂ ಪಿ.ವಿ.ಸಿ. ಕಾರ್ಡ್‍ಗೆ ರೂ. 35 ಮೊತ್ತವನ್ನು ಸರಕಾರದಿಂದ ನಿಗದಿಪಡಿಸಿದ್ದು, ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಸಾರ್ವಜನಿಕರು ಪಾವತಿಸಬಾರದು. ಆಯುಷ್ಮಾನ್ ಕ್ಯಾಂಪ್ ಮಾಡಿದ್ದಲ್ಲಿ, ಸಾರ್ವಜನಿಕರಿಂದ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಪಡೆದುಕೊಂಡಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ದ.ಕ ಹಾಗೂ ಸಿ.ಎಸ್.ಸಿ ಜಿಲ್ಲಾ ವ್ಯವಸ್ಥಾಪಕರು, ದ.ಕ. ಅಥವಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾ ಸಿಂಧು, ದ.ಕ ಇವರಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸೌಲಭ್ಯ ಮತ್ತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು ಅಥವಾ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಸಂಪರ್ಕಿಸುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.